ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
Ededorenews
ಕುಲಪತಿಗಳ ಅನುಪಸ್ಥಿತಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಎ. ಪ್ರಭುರಾಜ್, ಮಹಾತ್ಮ ಗಾಂಧೀಜಿ ಅವರ ಸತ್ಯ, ಅಹಿಂಸೆ ಹಾಗೂ ಸ್ವಚ್ಛತೆಯ ತತ್ವಗಳು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್, ಜೈ ಕಿಸಾನ್’ ಸಂದೇಶಗಳು ಇಂದಿನ ಸಮಾಜ ಹಾಗೂ ಕೃಷಿ ಕ್ಷೇತ್ರಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಹೇಳಿದರು.
ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ರಾಮೀಣ ಸಮಾಜದ ಪ್ರಗತಿಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವಿಚಾರಧಾರೆಗಳು ಪ್ರೇರಣೆಯಾಗಿವೆ ಎಂದು ತಿಳಿಸಿದರು. ರಾಯಚೂರು ನ್ಯೂಸ್
ಕಾರ್ಯಕ್ರಮದಲ್ಲಿ ಡೀನ್ (ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ) ಹಾಗೂ ಆಡಳಿತಾಧಿಕಾರಿ ಡಾ. ರಾಜಣ್ಣ, ನಿರ್ದೇಶಕರು (ಸ್ನಾತಕೋತ್ತರ) ಡಾ. ಎ.ಜಿ. ಶ್ರೀನಿವಾಸ್, ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಜಗಜೀವನ್ ರಾಮ್, ಗ್ರಂಥಪಾಲಕ ಹಾಗೂ ನಿರ್ದೇಶಕ (ಎಸ್‌ಸಿ/ಎಸ್‌ಟಿ ಕೋಶ) ಡಾ. ಮಚೇಂದ್ರನಾಥ್ ಎಸ್., ಸಹ ಸಂಶೋಧನಾ ನಿರ್ದೇಶಕ, ಮುಖ್ಯ ಕೃಷಿ ಸಂಶೋಧನಾ ಕೇಂದ್ರದ ಡಾ. ಮಹಾದೇವ ಸ್ವಾಮಿ, ಆಸ್ತಿ ಅಧಿಕಾರಿ ಶ್ರೀ ಮೇಸ್ತ್ರ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶನಾಲಯದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಕೃಷಿ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಸಂಗಣ್ಣ ಸಜ್ಜನ್ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.








