ರಾಯಚೂರು: ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಗೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಗೈರುಹಾಜರಾಗುವ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವಿನೋದ ರೆಡ್ಡಿ ಎಂ. ಆಗ್ರಹಿಸಿದ್ದಾರೆ. ರಾಯಚೂರು ಕರ್ನಾಟಕ ರಾಜ್ಯೋತ್ಸವ
ಅ. 17ರಂದು ಜಿಲ್ಲಾಡಳಿತದಿಂದ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹೋರಾಟಗಾರರ ಸಲಹೆ, ಸೂಚನೆಗಳನ್ನು ಪಡೆದು ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಕೇವಲ ಔಪಚಾರಿಕವಾಗಿ ನಡೆಸದೆ, ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಮಹತ್ವ ಸಾರುವ ರೀತಿಯಲ್ಲಿ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶದಂತೆ ವಾಣಿಜ್ಯ ಮಳಿಗೆಗಳು ಸೇರಿದಂತೆ ವಿವಿಧ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆ ಬಳಕೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯು 2023ರ ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಹೋರಾಟ ನಡೆಸಿತ್ತು. ಈ ಹೋರಾಟದ ನಂತರ ರಾಜ್ಯ ಸರ್ಕಾರ ಕನ್ನಡ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ ಎಂದು ವಿನೋದ ರೆಡ್ಡಿ ತಿಳಿಸಿದ್ದಾರೆ.
ನಗರದ ಅಂಗಡಿ-ಮುಂಗಟ್ಟುಗಳು, ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ಗಳು, ಚಿತ್ರಮಂದಿರಗಳು, ಸರ್ಕಾರಿ ಕಚೇರಿಗಳು ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ನಿಯಮ ಪಾಲನೆಯಾಗುವಂತೆ ಸಂಬಂಧಪಟ್ಟ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರುಹಾಜರಾಗುವುದರ ಜೊತೆಗೆ ಕನ್ನಡ ನಾಮಫಲಕಗಳ ಅಳವಡಿಕೆ ವಿಚಾರದಲ್ಲಿಯೂ ನಿರ್ಲಕ್ಷ್ಯ ವಹಿಸಿದರೆ, ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದು ಎಂದು ವಿನೋದ ರೆಡ್ಡಿ ಎಂ. ಎಚ್ಚರಿಕೆ ನೀಡಿದ್ದಾರೆ.








