ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ್ ಅವರು ನಗರದ ಎಲ್‌ವಿಡಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಉಪನ್ಯಾಸಕರನ್ನು ಭೇಟಿಯಾದರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.

ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಎ. ವಸಂತಕುಮಾರ್, ಕಾಂಗ್ರೆಸ್ ಪಕ್ಷವು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಅಕ್ಷರ ಆವಿಷ್ಕಾರದ ಯೋಜನೆಯಡಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಈಗಾಗಲೇ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪದವಿ ಮಹಾವಿದ್ಯಾಲಯಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಜರುಗಿಸಲಾಗುತ್ತಿದೆ. ಶಿಕ್ಷಕರ ಹಕ್ಕುಗಳ ರಕ್ಷಣೆ, ವೃತ್ತಿಪರ ಗೌರವ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ವಿಧಾನ ಪರಿಷತ್ ಸದಸ್ಯರಾಗಿ ಒಂದು ಅವಧಿಯಲ್ಲಿ ಶಿಕ್ಷಕರ ಪರವಾಗಿ ಕೆಲಸ ಮಾಡಿದ್ದಾರೆ. ಶಿಕ್ಷಕರ ಸಮಸ್ಯೆಗಳ ಪರಿಹಾರ ಹಾಗೂ ಅವರ ಹಿತಾಸಕ್ತಿಗಳ ರಕ್ಷಣೆಗೆ ಇನ್ನಷ್ಟು ಕಾರ್ಯನಿರ್ವಹಿಸಲು ಅವರಿಗೆ ಮತ್ತೊಂದು ಅವಕಾಶ ನೀಡಬೇಕು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಂ, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಬಸವರಾಜ ದರೂರು, ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ಭೀಮನಗೌಡ ಇಟಗಿ, ಎಲ್‌ವಿಡಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶರಣಗೌಡ ಬಿ.ಎಚ್. ಸೇರಿದಂತೆ ಇತರರು ಉಪಸ್ಥಿತರಿದ್ದರು.

Previous articleಮಕ್ಕಳ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಚೆಲುವ ಚಿಣ್ಣರು ಪುಸ್ತಕ ಬಹುಮಾನಕ್ಕೆ ಆಹ್ವಾನ
Next articleಶ್ರೀದೇವಿ ಪುರಾಣವೆಂದರೆ ಅದು ನಮ್ಮ ದೇಹದ ಪುರಾಣ: ಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು