ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಉಪನ್ಯಾಸಕರನ್ನು ಭೇಟಿಯಾಗಿ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಎ. ವಸಂತಕುಮಾರ, ಕಾಂಗ್ರೆಸ್ ಸರ್ಕಾರವು ಈ ವಿಶ್ವವಿದ್ಯಾಲಯವನ್ನು ಮಂಜೂರು ಮಾಡಿ ಪ್ರಾರಂಭಿಸಲು ಕಾರಣವಾಗಿದೆ. ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು. ಇಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಪದವಿ ಮಹಾವಿದ್ಯಾಲಯಗಳು ಹಾಗೂ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಪಾರದರ್ಶಕವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಕರ ಹಕ್ಕುಗಳ ರಕ್ಷಣೆ, ವೃತ್ತಿಪರ ಗೌರವ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಈ ಹಿಂದೆ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಪರವಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಇನ್ನಷ್ಟು ಕೆಲಸ ಮಾಡಲು ಮತ್ತೊಮ್ಮೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಂ, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಬಸವರಾಜ ದರೂರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ನಾಯಕ, ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ, ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯ ರಮೇಶ ರೋಸ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.








