ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಆದರ್ಶ ಪುರುಷ ಶ್ರೀರಾಮನನ್ನು ಪರಿಚಯಿಸಿದ್ದಾರೆ. ಅವರು ರಚಿಸಿದ ರಾಮಾಯಣದ ಮೂಲಕ ಮನುಷ್ಯ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಹೇಗೆ ಬದುಕಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಅಲ್ಲದೆ, ರಾಮರಾಜ್ಯದ ಪರಿಕಲ್ಪನೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿ ಆಚರಣೆ: ವಾಲ್ಮೀಕಿ ಜೀವನ ಚರಿತ್ರೆಯಿಂದ ಯುವಕರು ಸ್ಫೂರ್ತಿ ಪಡೆಯಲಿ- ಎಸ್ಪಿ ಅರುಣಾಂಗ್ಷು ಗಿರಿ
ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ತಾಲೂಕು ಮಟ್ಟದ ವಾಲ್ಮೀಕಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್, ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್, ಎಸ್. ಕೆಂಚರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ದೇವಮಾನೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ., ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಭಾಗಯ್ಯನಾಯಕ, ತಾಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.








