ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ತಿಳಿಸಿದರು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಸಮೀಕ್ಷೆ ಕಾರ್ಯ ಕೊನೆಯ ಹಂತದಲ್ಲಿದ್ದು, ರೈತರಿಗೆ ಅನುಕೂಲವಾಗುವಂತಹ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಅವರೊಂದಿಗಿದ್ದು, ಅಗತ್ಯ ನೆರವು ಒದಗಿಸಲಿದೆ ಎಂದು ಭರವಸೆ ನೀಡಿದರು.
ರಾಜ್ಯದ ಯಾವುದೇ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಖ್ಯಮಂತ್ರಿ ಅವರು ವಿಶೇಷ ಗಮನಹರಿಸಿದ್ದು, ಅಗತ್ಯ ಅನುದಾನ ಮೀಸಲಿಟ್ಟು ಕ್ರಮ ಕೈಗೊಳ್ಳುತ್ತಿದ್ದಾರೆ. ರಾಯಚೂರು ಜಿಲ್ಲೆಗೂ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚುವರಿ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿವೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಹಾಗೂ ಗೃಹಜ್ಯೋತಿ ಯೋಜನೆಗಳ ಮೂಲಕ ಮಹಿಳೆಯರು, ಯುವಕರು, ಬಡವರು ಸೇರಿದಂತೆ ವಿವಿಧ ವರ್ಗದ ಜನರಿಗೆ ಅನುಕೂಲವಾಗುತ್ತಿದೆ. ಜನಪರ ಯೋಜನೆಗಳ ಮೂಲಕ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳ ಮೂಲಕ ಈ ಭಾಗದ ನೀರಿನ ಸಮಸ್ಯೆ ನಿವಾರಣೆ ಹಾಗೂ ಅಂತರ್ಜಲ ವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೂ ವಿವಿಧ ಇಲಾಖೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ರಾಯಚೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕನ್ನಡ ಭಾಷೆಯ ಅಭಿವೃದ್ಧಿ, ಕಲ್ಯಾಣ ಕರ್ನಾಟಕದ ಪ್ರಗತಿ ಹಾಗೂ ರಾಯಚೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್), ಗೃಹರಕ್ಷಕ ದಳ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಈ ಸಂದರ್ಭದಲ್ಲಿ ಮಾಹಿತಿ ಹಕ್ಕು ಆಯೋಗದ ಆಯುಕ್ತ ಬಿ. ವೆಂಕಟಸಿಂಗ್, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ್ ಸುರೇಶ ವರ್ಮಾ, ಆರ್ಎಪಿಸಿಎಂಎಸ್ ಅಧ್ಯಕ್ಷ ಜಯಂತರಾವ್ ಪತಂಗೆ, ಕಸಾಪ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ಪ್ರಮುಖರಾದ ಜಿ. ಶಿವಮೂರ್ತಿ, ಭೀಮನಗೌಡ ಇಟಗಿ, ನರಸಿಂಹಲು ಮಾಡಗಿರಿ, ವಿಶ್ವನಾಥ ಪಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.








