ಮಾನ್ವಿ: ವಾಹನಗಳಿಂದ ಹೊರಸೂಸುವ ಹೊಗೆ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ವಾಹನ ಮಾಲೀಕರು ತಮ್ಮ ವಾಹನಗಳ ಎಂಜಿನ್ಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ನಿಯಮಿತವಾಗಿ ವಾಯುಮಾಲಿನ್ಯ ತಪಾಸಣೆ ಮಾಡಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಸಾರಿಗೆ ಅಧಿಕಾರಿ ವಿದ್ಯಾಸಾಗರ್ ಹೇಳಿದರು.
ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ವಾಹನ ನಿಲ್ದಾಣದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ರಾಯಚೂರು ವತಿಯಿಂದ ಆಯೋಜಿಸಿದ್ದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ-2026ರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಾಹನಗಳಿಂದ ಹೊರಬರುವ ಕಾರ್ಬನ್ ಮಾನಾಕ್ಸೈಡ್, ಕಾರ್ಬನ್ ಡೈಆಕ್ಸೈಡ್, ಹೈಡ್ರೋಕಾರ್ಬನ್, ನೈಟ್ರೋಜನ್ ಆಕ್ಸೈಡ್, ಸಲ್ಫರ್ ಡೈಆಕ್ಸೈಡ್ ಹಾಗೂ ಸೂಕ್ಷ್ಮ ಕಣಗಳು ಗಾಳಿಯನ್ನು ಕಲುಷಿತಗೊಳಿಸುತ್ತವೆ. ಇವುಗಳಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ, ಉಸಿರಾಟದ ಸಮಸ್ಯೆಗಳು, ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ದುಷ್ಪರಿಣಾಮ ಹಾಗೂ ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದರು.
ವಾಹನಗಳಿಂದ ಅತಿಯಾದ ಹೊಗೆ ಹೊರಬರದಂತೆ ಆರು ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಕಾರ್ಬ್ಯುರೇಟರ್ಗಳನ್ನು ಆಗಾಗ ಸ್ವಚ್ಛಗೊಳಿಸಬೇಕು. ಕಲಬೆರಕೆ ಇಂಧನ ಹಾಗೂ ಕಳಪೆ ಗುಣಮಟ್ಟದ ಎಂಜಿನ್ ಆಯಿಲ್ ಬಳಕೆ ಮಾಡಬಾರದು. ವಾಹನಗಳನ್ನು ನಿಯಮಿತವಾಗಿ ಪರಿಶೀಲಿಸಿ ನಿರ್ವಹಣೆ ಮಾಡಬೇಕು. ಟ್ರಾಫಿಕ್ ಸಿಗ್ನಲ್ಗಳಲ್ಲಿ ವಾಹನಗಳ ಎಂಜಿನ್ ಬಂದ್ ಮಾಡಬೇಕು. ಸಾಧ್ಯವಾದಷ್ಟು ವಿದ್ಯುತ್ ಚಾಲಿತ ವಾಹನಗಳನ್ನು ಬಳಸುವ ಮೂಲಕ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಲಹೆ ನೀಡಿದರು.
ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದರೆ ಕೇಂದ್ರ ಮೋಟಾರು ವಾಹನ ನಿಯಮಗಳ ಅಡಿಯಲ್ಲಿ ದಂಡ ವಿಧಿಸಲು ಅವಕಾಶವಿದೆ. ಹೀಗಾಗಿ ವಾಹನ ಮಾಲೀಕರು ಹಾಗೂ ಚಾಲಕರು ಪರಿಸರ ಸಂರಕ್ಷಣೆಯ ಜವಾಬ್ದಾರಿ ಅರಿತು ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಸಾರಿಗೆ ಅಧಿಕಾರಿ ವಿದ್ಯಾಸಾಗರ್ ಅವರು ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ-2026ರ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿ ಗಂಗಾಧರ, ಹಳ್ಳಿಖಾನ್ ಸಾಬ್, ಖಾಜಾ ತಬಸೇಜ್, ಸಮದಾನಿ ಸೇರಿದಂತೆ ವಿವಿಧ ವಾಹನಗಳ ಮಾಲೀಕರು ಹಾಗೂ ಚಾಲಕರು ಉಪಸ್ಥಿತರಿದ್ದರು.










