ಮಾನ್ವಿ: ಬರಗಾಲದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ರೈತರ ಬೆಳೆ ನಷ್ಟ ಪರಿಹಾರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಂಪಯ್ಯ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ವಿಪತ್ತು ನಿರ್ವಹಣಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಕೋಟ್ನೆಕಲ್, ಜಾಗೀರ ಪನ್ನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಆದರೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಸತೀಶ್ ಅವರು ತಾಲೂಕಿನಲ್ಲಿ ನೀರಿನ ಸಮಸ್ಯೆಯೇ ಇಲ್ಲ ಎಂದು ಉತ್ತರಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬರಗಾಲದ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅರೋಲಿ ಮತ್ತು ಪೋತ್ನಾಳ್ ಭಾಗದಲ್ಲಿ ಜಾನುವಾರುಗಳಿಗೆ ಅನುಕೂಲವಾಗುವಂತೆ ಮೇವು ಬ್ಯಾಂಕ್ ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮೇವು ಖರೀದಿಗೆ ಶೀಘ್ರ ಟೆಂಡರ್ ಕರೆಯುವಂತೆ ಚರ್ಚಿಸಲಾಗುವುದು ಎಂದರು.

ರೈತರ ಭತ್ತದ ಬೆಳೆ ಕಟಾವಿಗೆ ಬಂದಿರುವುದರಿಂದ ರೈತರಿಂದ ಮೇವು ಖರೀದಿಸಿ ಸಂಗ್ರಹಿಸುವ ಮೂಲಕ ಜಾನುವಾರುಗಳಿಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಹಿರೇಮಠ ಅವರಿಗೆ ಸೂಚಿಸಿದರು.

ಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆಯಲ್ಲಿ ಪ್ರಸ್ತುತ ಕೇವಲ 3.5 ಮೀಟರ್ ನೀರು ಸಂಗ್ರಹವಿದೆ. ಮತ್ತೆ ಕಾಲುವೆಗೆ ನೀರು ಹರಿಸಿದ ಸಂದರ್ಭದಲ್ಲಿ ಕೆರೆಯನ್ನು ತುಂಬಿಸಿಕೊಂಡು ಮಾರ್ಚ್ ತಿಂಗಳವರೆಗೆ ನೀರು ನಿರ್ವಹಣೆ ಮಾಡಲು ಕ್ರಮ ಕೈಗೊಳ್ಳಬೇಕು. ಪಟ್ಟಣದಲ್ಲಿ ಕುಡಿಯುವ ನೀರಿನ ಸಂಗ್ರಹಕ್ಕಾಗಿ ನಿರ್ಮಿಸಲಾಗುತ್ತಿರುವ ಟ್ಯಾಂಕ್‌ಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ಬಿ. ದೇವಮಾನೆ ಅವರಿಗೆ ತಿಳಿಸಿದರು.

ಗ್ರಾಮೀಣ ಭಾಗದಲ್ಲಿರುವ 17 ಕೆರೆಗಳನ್ನು ತುಂಬಿಸುವುದರ ಜೊತೆಗೆ ಕೆರೆಗಳ ನೀರು ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸುವಂತೆ ತಾಲೂಕು ಪಂಚಾಯಿತಿ ಇಒ ಖಾಲಿದ್ ಅಹ್ಮದ್ ಅವರಿಗೆ ಸೂಚಿಸಿದರು.

ತಾಲೂಕಿನಲ್ಲಿ 41,580 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ವಿವಿಧ ಬೆಳೆಗಳಿಗೆ ಸಮರ್ಪಕ ಮಳೆಯಾಗದೆ ಹಾನಿಯಾಗಿದೆ. ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಬೆಳೆ ನಷ್ಟ ಸಮೀಕ್ಷೆಯ ವರದಿಯಂತೆ 41,950 ರೈತರಿಗೆ ರಾಜ್ಯ ಸರ್ಕಾರದಿಂದ ನಿಗದಿತ ಪರಿಹಾರವಾಗಿ ಒಂದು ವಾರದೊಳಗೆ ಸುಮಾರು 40 ಕೋಟಿ ರೂ. ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ ಎಂದು ತಿಳಿಸಿದರು.

ಇದಲ್ಲದೆ, 57 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಣಸಿನಕಾಯಿ ಬೆಳೆ ಹಾನಿಯಾಗಿದ್ದು, ತೋಟಗಾರಿಕೆ ಬೆಳೆಗಳಿಗೂ ಅಗತ್ಯ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ತಾಲೂಕು ಕೃಷಿ ನಿರ್ದೇಶಕ ಗುರುನಾಥ ಭೂಸನೂರು ಅವರಿಗೆ ಸೂಚಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ನಹೀಮ್ ಹುಸೇನ್, ಇಒ ಖಾಲಿದ್ ಅಹ್ಮದ್, ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ಬಿ. ದೇವಮಾನೆ, ನಯೋಪ್ರ ತಾಲೂಕು ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Previous articleಬಸವೇಶ್ವರರ ಕುರಿತು ಆಕ್ಷೇಪಾರ್ಹ ಲೇಖನ, ವಿಡಿಯೋ: ಮಾನ್ವಿಯಲ್ಲಿ ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ