ಅಂಗನವಾಡಿ ಆವರಣದಲ್ಲಿ ರಾತ್ರಿ ಮದ್ಯಪಾನ: ಕ್ರಮಕ್ಕೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ
ದೇವಸೂಗೂರು: ಗ್ರಾಮದ ತಾಯಮ್ಮ ಗುಡಿ, ಲೇಬರ್ ಕಾಲೋನಿ ಪಕ್ಕದಲ್ಲಿರುವ ಸರ್ಕಾರಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ರಾತ್ರಿ ವೇಳೆ ಕೆಲ ಯುವಕರು ಕುಳಿತು ಮದ್ಯಪಾನ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಕ್ಕಳ ಕಲ್ಯಾಣಕ್ಕಾಗಿ ಇರುವ ಸರ್ಕಾರಿ ಅಂಗನವಾಡಿ ಆವರಣವನ್ನೇ ಇಂತಹ ಚಟುವಟಿಕೆಗಳಿಗೆ ಬಳಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯು ನ.13ರಂದು ದೇವಸೂಗೂರು ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿ ಸ್ವೀಕೃತಿ ಪಡೆದುಕೊಂಡಿದೆ.
ಅಂಗನವಾಡಿ ಕೇಂದ್ರದ ಸಿಬ್ಬಂದಿ ಪ್ರತಿದಿನ ಕೇಂದ್ರ ಮುಚ್ಚುವಾಗ ಆವರಣದ ಗೇಟಿಗೆ ಕಡ್ಡಾಯವಾಗಿ ಬೀಗ ಹಾಕಬೇಕು. ರಾತ್ರಿ ವೇಳೆ ಆವರಣದಲ್ಲಿ ಕತ್ತಲು ಆವರಿಸದಂತೆ ವಿದ್ಯುತ್ ದೀಪಗಳ ವ್ಯವಸ್ಥೆ ಕಲ್ಪಿಸಬೇಕು. ಆವರಣದಲ್ಲಿ ಮದ್ಯಪಾನ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಕ್ತಿನಗರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮನವಿ ರವಾನಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.
ಅಲ್ಲದೆ, ಅಂಗನವಾಡಿ ಕೇಂದ್ರದ ಆವರಣವನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ರಾತ್ರಿ ಗಸ್ತು ಹೆಚ್ಚಿಸಬೇಕು. ಸರ್ಕಾರಿ ಆಸ್ತಿಯ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಲು ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೈಗೊಂಡ ಕ್ರಮಗಳ ಕುರಿತು ಸಮಿತಿಗೆ ಲಿಖಿತ ಮಾಹಿತಿ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮಕ್ಕಳಿಗೆ ಸಂಬಂಧಿಸಿದ ಸರ್ಕಾರಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ತಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯ ಮುಖಂಡರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ್ ರೆಡ್ಡಿ, ತಾಲೂಕು ಉಪಾಧ್ಯಕ್ಷ ಕೃಷ್ಣ ಹಾಗೂ ಹೋಬಳಿ ಅಧ್ಯಕ್ಷ ಸುರೇಶ್ ಪಾಣಿ ಉಪಸ್ಥಿತರಿದ್ದರು.










