ರಾಯಚೂರು: ರಾಜ್ಯದ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನವೂ ಮುಂದುವರಿದಿದ್ದು, ಹೋರಾಟಕ್ಕೆ ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿದೆ.
ಕಳೆದ ಎರಡು ಮೂರು ವರ್ಷಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಭರವಸೆಗಳನ್ನು ನೀಡುತ್ತಲೇ ಕಾಲಹರಣ ಮಾಡುತ್ತಿದೆ. ಮಹಿಳಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿರುವುದು ಖಂಡನೀಯ. ಬೆಂಗಳೂರಿನ ಚಳಿಯಲ್ಲಿಯೂ ಚಿಕ್ಕ ಮಕ್ಕಳೊಂದಿಗೆ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನಹರಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ವಿಚಾರಿಸುವುದು, ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ಸುಮಾರು 42 ವಿವಿಧ ಕಾರ್ಯಕ್ರಮಗಳಲ್ಲಿ ಆಶಾ ಕಾರ್ಯಕರ್ತೆಯರು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುವ ಇವರು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿಯೂ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ಆದರೆ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲಿ ಅವರಿಗೆ ನೀಡಲಾಗುತ್ತಿರುವ ಗೌರವಧನ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ ಎಂದು ಹೇಳಿದೆ.
ಇದೇ ವೇಳೆ, ರಾಯಚೂರು ಜಿಲ್ಲೆಯ ಆಶಾ ಕಾರ್ಯಕರ್ತೆ ಚಾಂದ್ ಬಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಪಾಲ್ಗೊಂಡಿದ್ದ ವೇಳೆ ಚಳಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಸಂಘಟನೆ ಹಾರೈಸಿದೆ.
ಬೆಂಗಳೂರಿನ ಹೋರಾಟಕ್ಕೆ ಬೆಂಬಲವಾಗಿ ರಾಯಚೂರು ಜಿಲ್ಲೆಯ ಆಶಾ ಕಾರ್ಯಕರ್ತೆಯರೂ ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು. ಬೆಂಗಳೂರಿಗೆ ತೆರಳಲು ಸಾಧ್ಯವಾಗದ ಕಾರ್ಯಕರ್ತೆಯರು ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವ ಮೂಲಕ ತಮ್ಮ ಒಗ್ಗಟ್ಟು ಪ್ರದರ್ಶಿಸಬೇಕು. ಆಗ ಮಾತ್ರ ಅವರ ಹೋರಾಟಕ್ಕೆ ಸೂಕ್ತ ಮನ್ನಣೆ ದೊರೆಯಲಿದೆ ಎಂದು ಮನವಿ ಮಾಡಿದೆ.
ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಹಾಗೂ ರಾಜ್ಯ ಘಟಕದ ವತಿಯಿಂದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗಿದ್ದು, ಸರ್ಕಾರ ಕೂಡಲೇ ಅವರ ಸಮಗ್ರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಯಚೂರು ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಕುಮಾರ ಸಿ.ಕೆ. ಜೈನ್ ಒತ್ತಾಯಿಸಿದ್ದಾರೆ.








