
ರಾಯಚೂರು: ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನವೆಂಬರ್ 14 ಮತ್ತು 15ರಂದು ನಡೆಯಲಿರುವ 12ನೇ ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆಯ ರಾಯಚೂರು ಜಿಲ್ಲಾ ಘಟಕದ ವತಿಯಿಂದ ಕನ್ನಡಿಗರಿಗೆ ಆತ್ಮೀಯ ಸ್ವಾಗತ ಕೋರಲಾಗಿದೆ.
ವೇದಿಕೆಯ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಸಂಚಾಲಕ ಅಶೋಕಕುಮಾರ್ ಜೈನ್ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುವುದರ ಜತೆಗೆ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಕನ್ನಡಾಭಿಮಾನಿಗಳು, ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ.
ನವೆಂಬರ್ ತಿಂಗಳ ಪೂರ್ತಿ ನಡೆಯುವ ಕನ್ನಡ ರಾಜ್ಯೋತ್ಸವದ ಸಂಭ್ರಮದೊಂದಿಗೆ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಷರ ಜಾತ್ರೆಯಾಗಿ ಆಚರಿಸೋಣ. ಕನ್ನಡದ ತೇರು ಎಳೆಯುವ ಮೂಲಕ ಕನ್ನಡ ಡಿಂಡಿಮ ಬಾರಿಸೋಣ. ಸಾಹಿತಿಗಳ ಸಂಭ್ರಮದಲ್ಲಿ ಕನ್ನಡ, ಕನ್ನಡಿಗ ಮತ್ತು ಕರ್ನಾಟಕವನ್ನು ಮತ್ತಷ್ಟು ಬೆಸೆಯೋಣ ಎಂದು ಕರೆ ನೀಡಿದ್ದಾರೆ.
ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಾಹಿತ್ಯದ ಅಭಿಮಾನವನ್ನು ಹೆಚ್ಚಿಸುವ ಈ ಸಮ್ಮೇಳನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಬೇಕು. ಕನ್ನಡದ ಅಸ್ಮಿತೆ ಮತ್ತು ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮ್ಮೇಳನದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.









