ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸುವ ಮೂಲಕ ವಿರೋಧ ಪಕ್ಷದ ಘನತೆಯನ್ನು ಕಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್‌.ಎಸ್‌.ಬೋಸರಾಜು ಟೀಕಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಬದಲು ರಾಜಕೀಯ ಕಾರಣಗಳಿಗಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಬಿಜೆಪಿ ನಾಯಕರಾದ ವಿ.ಸೋಮಣ್ಣ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರೇ ‘ಬಳ್ಳಾರಿ ಚಲೋ’ ಪಾದಯಾತ್ರೆ ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸೇರಿದಂತೆ ಪಕ್ಷದ ಆಂತರಿಕ ಬೆಳವಣಿಗೆಗಳು ವಿಜಯೇಂದ್ರ ಹಾಗೂ ಆರ್‌.ಅಶೋಕ್ ಅವರಿಗೆ ತಿಳಿದಿರುವುದರಿಂದ ತಮ್ಮನ್ನು ತಾವು ತೋರಿಸಿಕೊಳ್ಳಲು ಈ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ರೈತರು ಹಾಗೂ ಜನರು ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅಭಿವೃದ್ಧಿ ಮತ್ತು ಜನಪರ ವಿಚಾರಗಳ ಬಗ್ಗೆ ಚರ್ಚಿಸಬೇಕಾದ ಬಿಜೆಪಿ ನಾಯಕರು ಕೇವಲ ರಾಜಕೀಯ ಮಾಡುವುದರಲ್ಲಿ ನಿರತರಾಗಿದ್ದಾರೆ. ರಾಮಮಂದಿರದ ವಿಚಾರದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪಗಳಿದ್ದರೂ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಏಕೆ ಸ್ಪಷ್ಟನೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ನಡೆಸುವುದು ಸರಿಯಲ್ಲ ಎಂದರು.
ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಬರಪೀಡಿತ ತಾಲೂಕುಗಳ ಘೋಷಣೆ ಹಾಗೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮಳೆ ಪ್ರಮಾಣ, ಮಣ್ಣಿನ ತೇವಾಂಶ ಹಾಗೂ ಬೆಳೆ ಪರಿಸ್ಥಿತಿ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಿ ವರದಿ ಸಿದ್ಧಪಡಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದ್ದು, ಎರಡನೇ ಹಂತದಲ್ಲಿ ಮತ್ತಷ್ಟು ತಾಲೂಕುಗಳನ್ನು ಘೋಷಿಸಲು ಸಿದ್ಧತೆ ನಡೆದಿದೆ ಎಂದು ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ, ಸಿರವಾರ ಹಾಗೂ ಸಿಂಧನೂರು ಸೇರಿದಂತೆ ಉಳಿದ ತಾಲೂಕುಗಳಲ್ಲಿಯೂ ಬರ ಪರಿಸ್ಥಿತಿ ಗಂಭೀರವಾಗಿದೆ. ಕೆಲವೆಡೆ ಮಳೆ ಮಾಪನ ಕೇಂದ್ರಗಳ ಅಂಕಿ-ಅಂಶಗಳಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇರುವುದರಿಂದ ವಾಸ್ತವ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೇಂದ್ರದ ತಂಡ ಪರಿಶೀಲನೆ ನಡೆಸಿ ಮಾರ್ಗಸೂಚಿಗಳಂತೆ ಅನುಮೋದನೆ ನೀಡಿದ ಬಳಿಕ ಕೇಂದ್ರದಿಂದ ಪರಿಹಾರ ಅನುದಾನ ಪಡೆಯುವ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.
ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹1 ಕೋಟಿ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಉದ್ಯೋಗ ಹಾಗೂ ಬೆಳೆ ಹಾನಿ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದೆ. ನೀರಾವರಿ ಪ್ರದೇಶಗಳಲ್ಲಿಯೂ ಕೆಲವೆಡೆ ನೀರಿನ ಸಮಸ್ಯೆ ಎದುರಾಗಿರುವುದರಿಂದ ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಹಾಗೂ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಸೆ.5ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭವಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಮಾನ್ವಿ ಪದವಿ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವುದರ ಜೊತೆಗೆ ಅರ್ಹರಿಗೆ ಹಕ್ಕುಪತ್ರ ವಿತರಣೆ, ಕಂದಾಯ ಗ್ರಾಮಗಳು ಹಾಗೂ ತಾಂಡಾಗಳಿಗೆ ಹಕ್ಕುಪತ್ರ ನೀಡುವ ಕಾರ್ಯ ನಡೆಯಲಿದೆ. ಬಡವರು ಹಾಗೂ ನಿವೇಶನ ರಹಿತರಿಗೆ ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನ ಒದಗಿಸುವ ಯೋಜನೆಯನ್ನೂ ಸರ್ಕಾರ ರೂಪಿಸಿದ್ದು, ಮುಂದಿನ ಹಂತದಲ್ಲಿ ಹೋಬಳಿ ಮಟ್ಟದಲ್ಲಿಯೂ ಅಭಿಯಾನ ಮುಂದುವರಿಯಲಿದೆ ಎಂದು ಎನ್‌.ಎಸ್‌.ಬೋಸರಾಜು ತಿಳಿಸಿದರು.

Previous articleಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ
Next articleತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ