ರಾಯಚೂರು: ಸ್ವಚ್ಛತೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಬೇಕು. ಸುತ್ತಲಿನ ಪರಿಸರ ಶುಚಿತ್ವದಿಂದ ಕೂಡಿದ್ದರೆ ಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಮಲ್ಲಿಕಾರ್ಜುನ್ ಹೇಳಿದರು.
ನಗರದ ಕೆಇಬಿ ಕಾಲೋನಿಯ ಪಿಎಂ ಶ್ರೀ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮವನ್ನು ಸ್ವಚ್ಛತಾ ಕಾರ್ಯದ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಎಡೆದೊರೆನ್ಯೂಸ್,
ಗಾಂಧೀಜಿಯವರ ಆದರ್ಶ, ಜೀವನ ಮೌಲ್ಯಗಳು ಹಾಗೂ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು. ಸತ್ಯ, ಅಹಿಂಸೆ ಹಾಗೂ ಪರಿಶ್ರಮದ ಮಾರ್ಗದಲ್ಲಿ ನಡೆದು ತಮ್ಮ ಕಾರ್ಯಗಳನ್ನು ತಾವೇ ನಿರ್ವಹಿಸುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದರು.

Raichur news
ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸ್ವಚ್ಛತೆ ಕಾಪಾಡುವುದರ ಜತೆಗೆ ಗಿಡಮರಗಳನ್ನು ಬೆಳೆಸುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಪರಿಶ್ರಮಿಸಬೇಕು ಎಂದು ಸಲಹೆ ನೀಡಿದರು.
ಶಾಲೆ ಸುಂದರ ವನವಾಗಬೇಕಾದರೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಸಮುದಾಯದ ಸಹಭಾಗಿತ್ವವೂ ಪ್ರಮುಖವಾಗಿದೆ. ಮಕ್ಕಳಿಗೆ ಶ್ರಮದಾನದ ಮಹತ್ವದ ಅರಿವು ಮೂಡಿಸಿದಾಗ ಅವರು ತಮ್ಮ ಶಾಲೆಯನ್ನು ದೇಗುಲದಂತೆ ಕಾಣಲು ಆರಂಭಿಸುತ್ತಾರೆ ಎಂದರು.
‘ಕಾಯಕವೇ ಕೈಲಾಸ’ ಎಂಬ ಬಸವಣ್ಣನವರ ತತ್ವವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾರ್ಯಪ್ರವೃತ್ತರಾದಾಗ ಮಕ್ಕಳು ಕೂಡ ನಮ್ಮನ್ನು ಅನುಸರಿಸುತ್ತಾರೆ ಎಂದು ಹೇಳಿದರು.
ಸಾಂಕೇತಿಕವಾಗಿ ಸಸಿಗಳನ್ನು ನೆಡುವುದಷ್ಟೇ ಸಾಕಾಗುವುದಿಲ್ಲ. ನೆಟ್ಟ ಸಸಿಗಳ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಬೇಕು. ಇದರಿಂದ ಅವರಲ್ಲಿ ಪರಿಸರ ಸಂರಕ್ಷಣೆ ಹಾಗೂ ಶ್ರಮದಾನದ ಬಗ್ಗೆ ಹೆಚ್ಚಿನ ಅರಿವು ಮೂಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಈರಣ್ಣ ಕೋಸಗಿ, ಎಸ್‌ಡಿಎಂಸಿ ಅಧ್ಯಕ್ಷ ನಾಗೇಂದ್ರಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಜಶೇಖರ್ ಪಾಟೀಲ್, ಶಿಕ್ಷಣ ಸಂಯೋಜಕರಾದ ರಾಮಕೃಷ್ಣ ಕಟ್ಕಾವಲಿ, ಮಂಜುನಾಥ, ರಾಘವೇಂದ್ರ, ಶಿಕ್ಷಕರಾದ ವೆಂಕೇಶ ಜಾಲಿಬೆಂಚಿ, ಉರುಕುಂದ ನರಸಿಂಹರಾಜ, ನೀರಜ್, ದೇವರಾಜ್, ಸುನಂದಾ, ಸಿಆರ್‌ಪಿ ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.








