ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಸಚಿವ (ಮೌಲ್ಯಮಾಪನ)ರಾಗಿ ಡಾ.ವಿರುಪಾಕ್ಷಯ್ಯ ಡಿಬಿಎಂ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ವಿಶ್ವವಿದ್ಯಾಲಯದ ಪರೀಕ್ಷಾಂಗ ಕಚೇರಿಯಲ್ಲಿ ಕಡತಕ್ಕೆ ಸಹಿ ಹಾಕುವ ಮೂಲಕ ಅಧಿಕಾರ ವಹಿಸಿಕೊಂಡ ಅವರು, ಹೊಸ ಶಿಕ್ಷಣ ನೀತಿಯ ಆಶಯಗಳಿಗೆ ಅನುಗುಣವಾಗಿ ತ್ವರಿತ ಹಾಗೂ ಗುಣಮಟ್ಟದ ಪರೀಕ್ಷಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ ತುಂಬುವುದರ ಜತೆಗೆ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಪದವಿ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶ್ರಮಿಸಲಾಗುವುದು. ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಕಲ ರೀತಿಯ ಪ್ರೋತ್ಸಾಹ ನೀಡುವುದರೊಂದಿಗೆ ಹೊಸ ಶಿಕ್ಷಣ ನೀತಿಯಂತೆ ಪ್ರವೇಶ, ಆಡಳಿತ ಮತ್ತು ಪರೀಕ್ಷಾ ವಿಭಾಗಗಳಲ್ಲಿ ಸಮಗ್ರ ಸುಧಾರಣೆ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ವಿರುಪಾಕ್ಷಯ್ಯ ಅವರನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರು ಸ್ವಾಗತಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎ.ಚನ್ನಪ್ಪ, ಹಣಕಾಸು ಅಧಿಕಾರಿ ಡಾ.ಸುಯಮೀಂದ್ರ ಕುಲಕರ್ಣಿ, ಉಪಕುಲಸಚಿವ ಡಾ.ಕೆ.ವೆಂಕಟೇಶ, ಶಿಕ್ಷಣ ನಿಕಾಯದ ಡೀನ್ ಪ್ರೊ.ಪಾರ್ವತಿ ಸಿ.ಎಸ್., ವಾಣಿಜ್ಯ ನಿಕಾಯದ ಡೀನ್ ಪ್ರೊ.ಪಿ.ಭಾಸ್ಕರ್, ಕಲಾ ನಿಕಾಯದ ಡೀನ್ ಡಾ.ಲತಾ, ಗ್ರಂಥಪಾಲಕ ಡಾ.ಜಿ.ಎಸ್.ಬಿರಾದಾರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೂತನ ಕುಲಸಚಿವರನ್ನು ಸ್ವಾಗತಿಸಿ ಸನ್ಮಾನಿಸಿದರು.








