ಮಂತ್ರಾಲಯ: ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಠದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳು ಜರುಗಿದವು.

ಶ್ರೀಕೃಷ್ಣನಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸುವ ಮುನ್ನ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ನೇತೃತ್ವದಲ್ಲಿ ಸಾಂಪ್ರದಾಯಿಕ ಪಿಂಡ್ಲಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಮಠದ ಹೊರಭಾಗದ ರಾಜಬೀದಿಯಲ್ಲಿ ಆಯೋಜಿಸಿದ್ದ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು.

ಉತ್ಸವದಲ್ಲಿ ಸ್ವತಃ ಶ್ರೀ ಸುಬುಧೇಂದ್ರ ತೀರ್ಥರು ಭಾಗವಹಿಸಿ, ಮೊಸರು, ಹಾಲು ಹಾಗೂ ಬೆಣ್ಣೆ ತುಂಬಿದ್ದ ಮಡಿಕೆಯನ್ನು ಒಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಭಕ್ತರು ಹಾಗೂ ಮಠದ ಸಿಬ್ಬಂದಿ ಹರ್ಷೋದ್ಗಾರ ವ್ಯಕ್ತಪಡಿಸಿದರು.

ಪಿಂಡ್ಲಿ ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದ ಗಡಿಗಿ ಒಡೆಯುವ ಸ್ಪರ್ಧೆಯಲ್ಲಿ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಓಕಳಿ ಎರಚುತ್ತಿದ್ದರೂ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಗುರಿ ಸಾಧಿಸಿ ಮಡಿಕೆ ಒಡೆಯಲು ವಿದ್ಯಾರ್ಥಿಗಳು ಪ್ರಯತ್ನಿಸಿದರು. ಈ ದೃಶ್ಯ ನೆರೆದಿದ್ದ ಭಕ್ತರಲ್ಲಿ ವಿಶೇಷ ಉತ್ಸಾಹ ಮೂಡಿಸಿತು.

ಉತ್ಸವದ ಬಳಿಕ ಮಠದ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ, ಪೂಜೆ ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಯಿತು.

ಮಠದ ಸಿಬ್ಬಂದಿ, ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀಕೃಷ್ಣನ ಆರಾಧನೆ ನೆರವೇರಿಸಿದರು. ಇಡೀ ಮಠದ ಆವರಣವು ಭಕ್ತಿಗೀತೆಗಳು ಹಾಗೂ ಧಾರ್ಮಿಕ ವಾತಾವರಣದಿಂದ ಕಂಗೊಳಿಸಿತು.

Previous articleತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ