ರಾಯಚೂರು: ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸಂಭ್ರಮಕ್ಕೆ ಸಾಕ್ಷಿಯಾದ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ಪರಿಷತ್ ಹಾಗೂ ಕನ್ನಡ ಧ್ವಜಾರೋಹಣ ಮತ್ತು ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆಯ ಮೂಲಕ ಶನಿವಾರ ಅದ್ದೂರಿ ಚಾಲನೆ ನೀಡಲಾಯಿತು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ಆವರಣದಲ್ಲಿ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್.ಬೋಸರಾಜು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಪರಿಷತ್ ಧ್ವಜಾರೋಹಣ ಮಾಡಿದರು. ತಾಲೂಕು ಕಸಾಪ ಅಧ್ಯಕ್ಷ ಬಿ.ವಿಜಯರಾಜೇಂದ್ರ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಅಧಿಕೃತ ಚಾಲನೆ ನೀಡಿದರು.

ಧ್ವಜಾರೋಹಣದ ಬಳಿಕ ನಗರದ ಮಹಿಳಾ ಸಮಾಜದಿಂದ ಸಮ್ಮೇಳನಾಧ್ಯಕ್ಷರಾದ ಹಿರಿಯ ಸಾಹಿತಿ ಹಾಗೂ ಶಿಕ್ಷಣ ತಜ್ಞ ರಾಮಣ್ಣ ಹವಳೆ ಅವರನ್ನು ಪುಷ್ಪಾಲಂಕೃತ ರಥದಲ್ಲಿ ಕೂರಿಸಿ ಭವ್ಯ ಮೆರವಣಿಗೆ ನಡೆಸಲಾಯಿತು. ಮಹಿಳಾ ಸಮಾಜದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ತಲುಪಿತು. ಸಮ್ಮೇಳನಾಧ್ಯಕ್ಷರನ್ನು ರಥದಲ್ಲಿ ಗೌರವಪೂರ್ವಕವಾಗಿ ಕರೆತಂದ ದೃಶ್ಯ ಕನ್ನಡ ಸಾಹಿತ್ಯಾಭಿಮಾನಿಗಳ ಗಮನ ಸೆಳೆಯಿತು.
ಮೆರವಣಿಗೆಯುದ್ದಕ್ಕೂ ವಿವಿಧ ಜನಪದ ಕಲಾತಂಡಗಳ ಪ್ರದರ್ಶನಗಳು ಕನ್ನಡ ನಾಡಿನ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿದವು. ಜಾಂಜ್ ಮೇಳ, ಹಗಲು ವೇಷ, ಡೊಳ್ಳು ಕುಣಿತ, ಕಣಿಹಲಿಗೆ, ಗಾರಡಿ ಗೊಂಬೆ ಹಾಗೂ ಲಂಬಾಣಿ ನೃತ್ಯ ಸೇರಿದಂತೆ ಹಲವು ಕಲಾತಂಡಗಳು ತಮ್ಮ ವಿಶಿಷ್ಟ ಪ್ರದರ್ಶನದ ಮೂಲಕ ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು.
ಕಲಾತಂಡಗಳ ವಾದ್ಯಗಳ ನಾದ, ಜನಪದ ಕಲಾವಿದರ ಹೆಜ್ಜೆ ಹಾಗೂ ಕನ್ನಡಪರ ಘೋಷಣೆಗಳಿಂದ ನಗರದ ಪ್ರಮುಖ ರಸ್ತೆಗಳು ಹಬ್ಬದ ವಾತಾವರಣವನ್ನು ಪಡೆದುಕೊಂಡಿದ್ದವು. ಮೆರವಣಿಗೆಯಲ್ಲಿ ಪಾಲ್ಗೊಂಡ ಗಣ್ಯರು, ಜನಪ್ರತಿನಿಧಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕಲಾವಿದರೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಮೆರವಣಿಗೆಯನ್ನು ವೀಕ್ಷಿಸಿದರು.
ಜಿಲ್ಲೆಯ ಸಾಹಿತ್ಯಿಕ ಪರಂಪರೆ, ಕನ್ನಡ ಭಾಷೆಯ ಶ್ರೀಮಂತಿಕೆ ಹಾಗೂ ಸ್ಥಳೀಯ ಜನಪದ ಕಲಾ ವೈವಿಧ್ಯವನ್ನು ಪ್ರತಿಬಿಂಬಿಸಿದ ಈ ಮೆರವಣಿಗೆ ಸಮ್ಮೇಳನದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು. ಆರಂಭಿಕ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸಂಸದ ಜಿ.ಕುಮಾರ ನಾಯಕ, ಶಾಸಕ ಬಸನಗೌಡ ದದ್ದಲ್, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಪ್ರಮುಖರಾದ ಜಯಣ್ಣ, ರಾಜಶೇಖರ್ ರಾಮಸ್ವಾಮಿ, ಕೆ.ಶಾಂತಪ್ಪ, ಭೀಮನಗೌಡ, ರವೀಂದ್ರ ಜಲ್ದಾರ್, ಕಡಗೋಲ ಆಂಜನೇಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.










