ರಾಯಚೂರು: ತೀವ್ರ ಬರ, ಬೆಳೆ ನಷ್ಟ ಹಾಗೂ ನೈಸರ್ಗಿಕ ವಿಕೋಪಗಳಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು, ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಸೇನಾ ಕರ್ನಾಟಕ ಸಂಘಟನೆಯ ರಾಯಚೂರು ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು, ರೈತರು ಹಾಗೂ ಕೃಷಿ ಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಧರಣಿ ಹಮ್ಮಿಕೊಂಡು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳಲ್ಲಿ ಕಂದಾಯ ಇಲಾಖೆ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು. ಹಾನಿಗೊಳಗಾದ ಬೆಳೆಗಳಿಗೆ ಪ್ರತಿ ಎಕರೆಗೆ ಕನಿಷ್ಠ ₹50 ಸಾವಿರ ತುರ್ತು ಪರಿಹಾರ ನೀಡಬೇಕು. ಸಂಕಷ್ಟದಲ್ಲಿರುವ ಅರ್ಹ ರೈತರ ಕೃಷಿ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ತುಂಗಭದ್ರಾ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳ ಹೂಳೆತ್ತುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಕೊನೆಯ ಭಾಗದ ಜಮೀನುಗಳಿಗೂ ಸಮರ್ಪಕವಾಗಿ ನೀರು ತಲುಪಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ ಕನಿಷ್ಠ 12 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ರೈತರಿಗೆ ಸಕಾಲದಲ್ಲಿ ಗುಣಮಟ್ಟದ ಬಿತ್ತನೆ ಬೀಜ ಮತ್ತು ಗೊಬ್ಬರ ವಿತರಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ಜಿ. ನಮೋಶಿಗೆ ಗೆಲುವು
ಭತ್ತ, ಹತ್ತಿ, ತೊಗರಿ ಹಾಗೂ ಮೆಣಸಿನಕಾಯಿ ಸೇರಿದಂತೆ ಪ್ರಮುಖ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆ ನಿಗದಿಪಡಿಸಬೇಕು. ಸರ್ಕಾರಿ ಖರೀದಿ ಕೇಂದ್ರಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಿದ ರೈತರಿಗೆ ಬಾಕಿ ಉಳಿದಿರುವ ಹಣವನ್ನು ತಕ್ಷಣ ಪಾವತಿಸಬೇಕು. ಬೆಳೆ ವಿಮೆ ಪರಿಹಾರದ ಮೊತ್ತವನ್ನೂ ರೈತರ ಖಾತೆಗಳಿಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನಿವಾರಿಸಲು ಸರ್ಕಾರಿ ಗೋಶಾಲೆಗಳನ್ನು ತುರ್ತಾಗಿ ಆರಂಭಿಸಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ಒದಗಿಸುವುದರ ಜತೆಗೆ, ಕೂಲಿಯನ್ನು ಸಕಾಲದಲ್ಲಿ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜಿಲ್ಲಾಡಳಿತವು ರೈತ ಮುಖಂಡರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ತುರ್ತು ಸಭೆ ಕರೆದು, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸಬೇಕು. ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಶಿವಸೇನಾ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಹಾಗೂ ನೂರಾರು ರೈತರು ಭಾಗವಹಿಸಿದ್ದರು.
ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…
ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…
ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…
ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…
ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…
ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…