ರಾಯಚೂರು: ಸೋಮವಾರ ಸಂಜೆ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ ಹಾಗೂ ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೋಹಪಾತ್ರ ಅವರು ರಾಯಚೂರು ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ನಡೆಯುವ ಸ್ಥಳಗಳನ್ನು ಪರಿಶೀಲಿಸಿದರು.
ನಗರದ ಮಾವಿನ ಕೆರೆ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್ ತಂತಿಗಳು ಹಾಗೂ ಗಿಡ-ಮರಗಳಿಗೆ ಗಣೇಶ ಮಂಟಪಗಳು ಅಥವಾ ಅಲಂಕಾರಿಕ ವಸ್ತುಗಳು ತಾಗದಂತೆ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಜೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಗಣೇಶೋತ್ಸವ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಹಾಗೂ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸ್ಥಳಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಕಂದಾಯ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.








